ಬೀದರ: ಶಿಕ್ಷಕರಿಗೆ 'ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಅನ್ವಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನ ಮರು ಪರಿಶೀಲನೆ ಕುರಿತು ರಾಜ್ಯ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಒತ್ತಾಯಿಸಿದೆ.
ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಗುರುವಾರ ನಿಯೋಗದಲ್ಲಿ ಈ ಕುರಿತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತು 2026ರ ಮೇ 29ರಂದು ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಶಿಕ್ಷಕ ಪರಿಷತ್ 2010ಕ್ಕೆ ಮುಂಚೆ ಶಿಕ್ಷಕರಾಗಿ ನೇಮಕಗೊಂಡವರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಕಡ್ಡಾಯಗೊಳಿಸಿದೆ. ಇದರಿಂದ ದೇಶಾದ್ಯಂತ 17 ಲಕ್ಷ ಶಿಕ್ಷಕರಲ್ಲಿ ಸೇವಾ ಭದ್ರತೆ ಹಾಗೂ ಭವಿಷ್ಯದ ಕುರಿತು ಅಭದ್ರತೆ ಕಾಡುತ್ತಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.

