ಜನರ ಆರೋಗ್ಯಕ್ಕಿಂತ ಮಿಗಿಲಾದುದು ಮತ್ತೊಂದಿಲ್ಲ: ಮಾಜಿ ಸಚಿವ ರಾಜಶೇಖರ ಪಾಟೀಲ

ವರದಿಗಾರರುSite Administrator
ಪ್ರಕಟಣೆ (IST)
ಅಪ್ಡೇಟ್ (IST)
ಓದುವ ಸಮಯ5 min read
ಹಂಚಿಕೊಳ್ಳಿ:
ಜನರ ಆರೋಗ್ಯಕ್ಕಿಂತ ಮಿಗಿಲಾದುದು ಮತ್ತೊಂದಿಲ್ಲ: ಮಾಜಿ ಸಚಿವ ರಾಜಶೇಖರ ಪಾಟೀಲ

ಕಾರ್ಖಾನೆಗಳ ವಿರುದ್ಧದ ಪ್ರತಿಭಟನಾ ಸ್ಥಳಕ್ಕೆ ಭೇಟಿ | ಜನಪರ ಹೋರಾಟಕ್ಕೆ ಪೂರ್ಣ ಬೆಂಬಲ ಘೋಷಣೆ

​ಹುಮನಾಬಾದ: ಕ್ಷೇತ್ರದ ಜನರ ಆರೋಗ್ಯಕ್ಕಿಂತ ಮಿಗಿಲಾದುದು ಮತ್ತೊಂದೂ ಇಲ್ಲ. ಸಾರ್ವಜನಿಕರ ಹಿತಾಸಕ್ತಿಗಾಗಿ ಸರ್ಕಾರದ ವಿರುದ್ಧವೇ ಹೋರಾಟ ಮಾಡಬೇಕಾಗಿ ಬಂದರೂ ಹಿಂದೆಟು ಹಾಕದೆ ಜನರ ಧ್ವನಿಯಾಗಿ ಮುಂಚೂಣಿಯಲ್ಲಿ ನಿಲ್ಲುತ್ತೇನೆ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ ಸ್ಪಷ್ಟಪಡಿಸಿದ್ದಾರೆ.

​ಅಸಮರ್ಪಕ ತ್ಯಾಜ್ಯ ನಿರ್ವಹಣೆಯಿಂದ ಪರಿಸರ ಮಾಲಿನ್ಯ ಉಂಟುಮಾಡುತ್ತಿರುವ ಕೈಗಾರಿಕಾ ಕಾರ್ಖಾನೆಗಳನ್ನು ತಕ್ಷಣವೇ ಬಂದ್ ಮಾಡುವಂತೆ ಆಗ್ರಹಿಸಿ ಮಂಗಳವಾರ ಬೀದರ್ - ಕಲಬುರಗಿ ರಾಷ್ಟ್ರೀಯ ಹೆದ್ದಾರಿ ತಡೆದು ನಡೆಸಲಾಗುತ್ತಿದ್ದ ಬೃಹತ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

​ಸರ್ಕಾರ ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ

ಹೋರಾಟಕ್ಕೆ ತಮ್ಮ ಪೂರ್ಣ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ಕಾರ್ಖಾನೆಗಳ ಮಾಲಿನ್ಯದಿಂದ ಉಂಟಾಗುತ್ತಿರುವ ಗಂಭೀರ ಸಮಸ್ಯೆಗಳನ್ನು ಈಗಾಗಲೇ ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗಿದೆ. ಇದರ ಪರಿಣಾಮವಾಗಿ ಈಗಾಗಲೇ ನಾಲ್ಕು ಕಾರ್ಖಾನೆಗಳನ್ನು ಬಂದ್ ಮಾಡಿಸಲಾಗಿದ್ದು, ತಪ್ಪು ಎಸಗಿರುವ ಇತರ ಕಾರ್ಖಾನೆಗಳ ವಿರುದ್ಧವೂ ಅಧಿಕಾರಿಗಳು ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಿದ್ದಾರೆ ಎಂದರು.

​ಕಾರಂಜಾ ಜಲಾಶಯ ಕಲುಷಿತ – ಆತಂಕ:

ಕೈಗಾರಿಕೆಗಳಿಂದ ಹೊರಬರುವ ವಿಷಕಾರಿ ತ್ಯಾಜ್ಯವು ಹಳ್ಳ-ಕೊಳ್ಳಗಳ ಮೂಲಕ ಹರಿದು 'ಕಾರಂಜಾ ಜಲಾಶಯ'ವನ್ನು ಸೇರುತ್ತಿದೆ. ಇದು ನೇರವಾಗಿ ಸಾರ್ವಜನಿಕರ ಹಾಗೂ ಜಾನುವಾರುಗಳ ಆರೋಗ್ಯದ ಮೇಲೆ ಅತ್ಯಂತ ದುಷ್ಪರಿಣಾಮ ಬೀರುತ್ತಿದೆ. ಶ್ರೀ ಮಾಣಿಕಪ್ರಭು ಸಂಸ್ಥಾನದಿಂದ ಆರಂಭಗೊಂಡಿರುವ ಈ ಪವಿತ್ರ ಹೋರಾಟಕ್ಕೆ ನನ್ನ ಸಂಪೂರ್ಣ ಸಾಥ್ ಇದೆ. ಇಲ್ಲಿ ಪಕ್ಷಭೇದ ಮರೆತು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಹೋರಾಡಬೇಕಿದೆ ಎಂದು ಕರೆ ನೀಡಿದರು.

​ಲೋಕಾಯುಕ್ತ ತನಿಖೆಗೆ ಆಗ್ರಹ

​ಅಧಿಕಾರಿಗಳಾಗಲಿ ಅಥವಾ ನಾವಾಗಲಿ ಶಾಶ್ವತವಲ್ಲ, ಯಾರೂ ಅಧಿಕಾರಕ್ಕೆ ಅಂಟಿಕೊಂಡು ಕುಳಿತಿಲ್ಲ. ಜನರ ಸೇವಕನಾಗಿ ಸಾರ್ವಜನಿಕರು ಹಮ್ಮಿಕೊಳ್ಳುವ ಪ್ರತಿಯೊಂದು ಹೋರಾಟದ ಯೋಜನೆಗೂ ನಾನು ಹೆಗಲು ಕೊಡುತ್ತೇನೆ. ಕಳೆದ ನಾಲ್ಕು ವರ್ಷಗಳಿಂದ ಇಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಸಾರ್ವಜನಿಕರು ಗಂಭೀರವಾಗಿ ಗಮನಿಸಬೇಕು. ಇತ್ತೀಚೆಗೆ ಲೋಕಾಯುಕ್ತ ಅಧಿಕಾರಿಗಳು ಕೈಗಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತರು ಕೇವಲ ಕಾರ್ಖಾನೆಗಳ ತಪಾಸಣೆಗೆ ಸೀಮಿತವಾಗದೆ, ಈ ಅಕ್ರಮ ಮತ್ತು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಪ್ರಭಾವಿಗಳ ವಿರುದ್ಧವೂ ಸಮಗ್ರ ತನಿಖೆಗೆ ಆದೇಶಿಸಬೇಕು," ಎಂದು ಆಗ್ರಹಿಸಿದರು.

​ಮೂಲಸೌಕರ್ಯ ಸ್ಥಗಿತಗೊಳಿಸಲು ಒತ್ತಾಯ

​ಈ ಸಂದರ್ಭದಲ್ಲಿ ಮುಖಂಡ ಗಜೇಂದ್ರ ಕನಕಟ್ಟಕರ್ ಮಾತನಾಡಿ, ನಿಯಮ ಉಲ್ಲಂಘಿಸಿದ ಕಾರ್ಖಾನೆಗಳು ಬಂದ್ ಮಾಡಿಸಲಾಗಿರುವ ಕಂಪನಿಗಳಿಗೆ ನೀಡಲಾಗುತ್ತಿರುವ ವಿದ್ಯುತ್, ನೀರು ಪೂರೈಕೆ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ತಕ್ಷಣವೇ ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

​ಪ್ರತಿಭಟನೆಯಲ್ಲಿ ಸ್ಥಳೀಯ ಪ್ರಮುಖ ನಾಯಕರು, ಪರಿಸರ ಪ್ರೇಮಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಆಕ್ರೋಶ ವ್ಯಕ್ತಪಡಿಸಿದರು.